ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ತಿಳಿಸಿದ್ದಾರೆ.
ರಾಜೀನಾಮೆಗೆ ಮುನ್ನ ಸಚಿವರೊಂದಿಗೆ ನಡೆಸಿದ ಉಪಾಹಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತಿದ್ದೇನೆ. ಮುಂದಿನ ಸಿಎಂ ಡಿಕೆಶಿ. ಎಲ್ಲರೂ ಅವರಿಗೆ ಸಹಕಾರ ನೀಡಿ” ಎಂದು ಮನವಿ ಮಾಡಿದರು.
ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ರಾಜ್ಯಸಭೆಗೆ ಹೋಗುವುದಿಲ್ಲ. ಇಲ್ಲೇ ಇದ್ದುಕೊಂಡು ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಸಹಕಾರ ನೀಡುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳನ್ನು ಕಷ್ಟಪಟ್ಟು ಜಾರಿಗೆ ತಂದಿದ್ದೇವೆ. ಅವನ್ನು ಮುಂದುವರಿಸಿಕೊಂಡು ಹೋಗಿ, ಆರ್ಥಿಕ ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಸಚಿವರಿಗೆ ಸಲಹೆ ನೀಡಿದರು.
ಇನ್ನೂ ಎರಡು ವರ್ಷ ಸರ್ಕಾರ ಉಳಿದಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.
ಸಿದ್ದರಾಮಯ್ಯ ಘೋಷಣೆಯ ಬಳಿಕ ಸಭೆಯಲ್ಲಿದ್ದ ಕೆಲ ಸಚಿವರು ಭಾವುಕರಾಗಿ ಕಣ್ಣೀರಿಟ್ಟರು .
ಬಳಿಕ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಹೈಕಮಾಂಡ್ ನಿರ್ದೇಶನದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.








