ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕಾರ್ಯಕರ್ತರ ಪರಿಶ್ರಮದಿಂದ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಕ್ರಿಯಿಸಿದರು.
ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ವದಂತಿ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ವಿಪಕ್ಷದವರು ಯಾವಾಗಲೂ ಏನಾದರೂ ಆರೋಪ ಮಾಡುತ್ತಲೇ ಇರುತ್ತಾರೆ ಎಂದರು. ಯಾರೇ ಆಗಿರಲಿ, ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ಕಾರ್ಯಕರ್ತರು ಸಮಸ್ಯೆಗಳನ್ನು ನಮ್ಮ ಮುಂದೆ ಇಡುತ್ತಾರೆ. ಆ ಸಂದರ್ಭಗಳಲ್ಲಿ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಬೇಕಾಗುತ್ತದೆ. ಅದನ್ನು ಬಿಟ್ಟು ಬೇರೆ ಯಾವುದೇ ಹಸ್ತಕ್ಷೇಪ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ–ಜೆಡಿಎಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, ಗಾಂಧಿ ಹೆಸರನ್ನು ತೆಗೆದು ಹಾಕಿ, ಅದೇ ಗಾಂಧಿ ಪ್ರತಿಮೆಯ ಮುಂದೆ ಕುಳಿತು ಪ್ರತಿಭಟನೆ ನಡೆಸುವವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.ಇದನ್ನು ಓದಿ –ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ
ಇದೇ ವೇಳೆ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಮೌಲ್ಯದ ಹಣ ಸಾಗಿಸುತ್ತಿದ್ದ ವಾಹನ ನಾಪತ್ತೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಸಿಬಿಐ ತನಿಖೆ ನಡೆಸಲಿ. ಹಣ ಎಲ್ಲಿಂದ ಬಂದಿತ್ತು ಎಂಬುದನ್ನು ಸ್ಪಷ್ಟಪಡಿಸಲಿ. ಅದನ್ನು ಕಾಂಗ್ರೆಸ್‌ಗೆ ಸೇರಿದೆ ಎಂದು ಹೇಳಿ ಸುಮ್ಮನೆ ನಗೆಪಾಟಲಿಗೀಡಾಗುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.








