ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಈ ಚುನಾವಣೆಗಳಿಗೆ ಸಂಬಂಧಿಸಿದ ಮೀಸಲಾತಿ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿ ಹಾಗೂ ಸಚಿವರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಗಳನ್ನು ಪಕ್ಷದ ಚಿಹ್ನೆಯಡಿ ನಡೆಸಬೇಕೆಂದು ಹಲವು ಸಲಹೆಗಳು ಬಂದಿದ್ದರೂ, ಈ ಕುರಿತು ಇನ್ನೂ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಕುರಿತು ಸರ್ಕಾರದಲ್ಲಿ ಚಿಂತನೆ ನಡೆಯುತ್ತಿದೆ ಎಂದರು.
ನ್ಯಾಯಾಲಯದ ಆದೇಶಗಳನ್ನು ಗೌರವಿಸುವುದರ ಜೊತೆಗೆ, ನಮ್ಮ ಸರ್ಕಾರ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳಿಗೆ ಸಂಪೂರ್ಣ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಆಡಳಿತಕ್ಕೆ ಬರಬೇಕು ಎಂಬ ಉದ್ದೇಶ ನಮ್ಮದು ಎಂದು ಡಿಕೆ ಶಿವಕುಮಾರ್ ಹೇಳಿದರು.
ಈಗ ಐದು ಪಾಲಿಕೆಗಳಿಂದ 369 ವಾರ್ಡ್‌ಗಳನ್ನು ರಚಿಸಲಾಗಿದೆ. ಅಲ್ಲದೆ, ಬೆಂಗಳೂರಿನ ಹೊರವಲಯ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಚುನಾವಣೆ ಪ್ರಕ್ರಿಯೆ ಕುರಿತಂತೆ, ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಆದರೆ ಇದು ಸಂಪೂರ್ಣವಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯ. ಮತಪತ್ರ ಬಳಕೆಯಲ್ಲಿ ಯಾವುದೇ ತಪ್ಪಿಲ್ಲ. ಯಾವ ವಿಧಾನದಲ್ಲಿ ಚುನಾವಣೆ ನಡೆಯುತ್ತದೆ ಎಂಬುದಕ್ಕಿಂತ ಮತದಾನ ನಡೆಯುವುದು ಅತ್ಯಂತ ಮುಖ್ಯ ಎಂದು ಹೇಳಿದರು.ಇದನ್ನು ಓದಿ –ಮೈಸೂರಿನಲ್ಲಿ RFO ಕಾಂತರಾಜ್ ಚೌಹಾಣ್ ಮೃತದೇಹ ಪತ್ತೆ
ಇದೀಗ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಬಿಎಲ್‌ಎಗಳ ಸಿದ್ಧತೆಯನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.








