ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು, ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ
ಇಂದು ಮತ್ತು ನಾಳೆ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಂಭವಿಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಸಿಡಿಲು ಮತ್ತು ಬಿರುಗಾಳಿ ವೇಳೆ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.








