ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಭಾವುಕ ಸಂದೇಶ ಹಂಚಿಕೊಂಡಿದ್ದು, ತಮ್ಮ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
“ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಶಾಸಕ, ಸಚಿವ, ವಿರೋಧ ಪಕ್ಷದ ನಾಯಕ ಹಾಗೂ ಎರಡು ಬಾರಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಕನಸೂ ಕಂಡಿರಲಿಲ್ಲ. ಈ ಅವಕಾಶವನ್ನು ಸಂವಿಧಾನ ನೀಡಿದೆ” ಎಂದು ಹೇಳಿದ್ದಾರೆ.
ಬುದ್ಧ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರೇ ನನ್ನ ಆದರ್ಶ ಎಂದು ಹೇಳಿರುವ ಅವರು, 48 ವರ್ಷದ ರಾಜಕೀಯ ಜೀವನದಲ್ಲಿ ಶೋಷಿತರು, ಬಡವರು ಮತ್ತು ಅವಕಾಶ ವಂಚಿತರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದಿದ್ದಾರೆ.
ತಮ್ಮನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ಪಕ್ಷದ ಶಾಸಕರು, ಸಂಪುಟ ಸಹೋದ್ಯೋಗಿಗಳು ಹಾಗೂ ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿರುವ ಸಿದ್ದರಾಮಯ್ಯ, ಕನ್ನಡಿಗರ ಪ್ರೀತಿ ಮತ್ತು ಬೆಂಬಲಕ್ಕೆ ಚಿರಋಣಿ ಎಂದು ಹೇಳಿದ್ದಾರೆ.ಇದನ್ನು ಓದಿ –ಮುಂದಿನ ಸಿಎಂ ಡಿ.ಕೆ.ಶಿವಕುಮಾರ್: ಸಿದ್ದು ಘೋಷಣೆ
“ಸಂವಿಧಾನವೇ ನನ್ನ ಧರ್ಮ, ಜನರೇ ನನ್ನ ದೇವರು. ಜೀವ ಇರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.








