ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಕಳಪೆ ಹಾಗೂ ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ್ದ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ ಸಿಬಿಐ ಚೆನ್ನೈ ವಿಶೇಷ ತನಿಖಾ ದಳಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸೌಜನ್ಯ ಅವರ ತಾಯಿ ಕುಸುಮವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠ ನಡೆಸಿತು. 16-06-2023ರಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಸಿಬಿಐಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಅರ್ಜಿದಾರರ ಪರ ವಕೀಲ ಎಂ.ಆರ್. ಬಾಲಕೃಷ್ಣ ಅವರು, “ಸಿಬಿಐ ಅಡಿ ಖುಲಾಸೆ ಸಮಿತಿ ಅಸ್ತಿತ್ವದಲ್ಲಿದೆಯೇ ಎಂಬ ಮಾಹಿತಿಯೇ ಲಭ್ಯವಾಗಿಲ್ಲ” ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಪೀಠವು ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪಶ್ಚಿಮ ವಲಯದ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಿಬಿಐ ದೆಹಲಿ ಮತ್ತು ಚೆನ್ನೈ ವಿಭಾಗದ ವಿಶೇಷ ತನಿಖಾ ದಳಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಫೆಬ್ರವರಿ 23ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ
ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ನಾಪತ್ತೆಯಾಗಿದ್ದರು. ಮುಂದಿನ ದಿನ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ನಾಪತ್ತೆ ಪ್ರಕರಣ ದಾಖಲಾಗಿ, ನಂತರ ಅದನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿತ್ತು.
2013ರಲ್ಲಿ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಲಾಗಿದ್ದು, 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ಸಿಬಿಐ ನ್ಯಾಯಾಲಯಕ್ಕೆ ಸ್ಥಳಾಂತರಗೊಂಡಿತ್ತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ. ಸಂತೋಷ್ ಅವರು ಆರೋಪಿ ಸಂತೋಷ್ ರಾವ್ ಅವರನ್ನು ಅತ್ಯಾಚಾರ (ಐಪಿಸಿ 376) ಮತ್ತು ಕೊಲೆ (ಐಪಿಸಿ 302) ಆರೋಪಗಳಿಂದ ನಿರ್ದೋಷಿ ಎಂದು ಘೋಷಿಸಿ, 11 ವರ್ಷಗಳಿಂದ ಜೈಲಿನಲ್ಲಿ ಇದ್ದ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ್ದರು.ಇದನ್ನು ಓದಿ –ಬೆಂಗಳೂರಲ್ಲಿ RCB ಪಂದ್ಯಕ್ಕೆ ಅನುಮತಿ ನೀಡಿಲ್ಲ :ಸಚಿವ ಪರಮೇಶ್ವರ್
ಅಲ್ಲದೇ, ತನಿಖೆ ಕಳಪೆ ಹಾಗೂ ದೋಷಪೂರಿತವಾಗಿದ್ದು, ವೈಜ್ಞಾನಿಕ ಸಾಕ್ಷ್ಯಗಳು ವಿಫಲವಾಗಿವೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕೆಂದು ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಈಗಾಗಲೇ ವಜಾಗೊಳಿಸಿದೆ.








