ಪಣಜಿ: ಗೋವಾದ ಶಿರಗಾವ್ ದೇವಾಲಯದಲ್ಲಿ ನಡೆದ ಲೈರೈ ದೇವಿಯ ಜಾತ್ರೆ ಮೆರವಣಿಗೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ 50 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಧಾರ್ಮಿಕ ಕಾರ್ಯಕ್ರಮದ ವೇಳೆ ಜನಜಂಗುಳಿ ಉಂಟಾಗಿ, ಭಕ್ತರಲ್ಲಿ ಭೀತಿಯ ವಾತಾವರಣ ನಿರ್ಮಾಣವಾದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಸಹಸ್ರಾರು ಭಕ್ತರು ಪಾಲ್ಗೊಂಡಿದ್ದ ಜಾತ್ರೆಯ ಮೆರವಣಿಗೆಯ ನಡುವೆ ಹಠಾತ್ ಒತ್ತಡ ಉಂಟಾಗಿ ಜನರು ಪರಸ್ಪರ ಮೇಲೆ ಬಿದ್ದು ಕಾಲ್ತುಳಿತ ಸಂಭವಿಸಿದೆ.
ದುರಂತದ ನಂತರ ತಕ್ಷಣವೇ ತುರ್ತು ಸೇವಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲ್ತುಳಿತಕ್ಕೆ ನಿಖರ ಕಾರಣ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೆ ಪ್ರಾಥಮಿಕ ಮಾಹಿತಿಯಂತೆ, ಜನದಟ್ಟಣೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದಿರುವುದು ದುರಂತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
ಈ ಘಟನೆಯಿಂದ ಶೋಕಾವಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಮತ್ತು ಭಕ್ತಜನರು ಆಘಾತಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಲಾಗಿದೆ.