ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ವಿಶೇಷ ತಂಡ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ತಿಳಿಸಿದೆ.
ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರು, ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ನಡೆಯುತ್ತಿದೆ ಎಂಬುದಾಗಿ ಗಮನ ಸೆಳೆದ ಸೂಚನೆ ನೀಡಿದರು.ಇದಕ್ಕೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು.
ಅಕ್ರಮ ವಲಸಿಗರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ ಹಿಂದೂ ಪರ ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಯಾವುದೇ ಕಿರುಕುಳ ನೀಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಒಟ್ಟು 370 ಅಕ್ರಮ ವಲಸಿಗರು ಪತ್ತೆಯಾಗಿದ್ದು, ಅವರಲ್ಲಿ 213 ಮಂದಿಯನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಉಳಿದ 157 ಮಂದಿಯ ವಿರುದ್ಧ ಅಕ್ರಮ ವಲಸಿಗರ ಬಂಧನ ಕೇಂದ್ರ (ಎಫ್‌ಡಿಸಿ)ಯಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ, ಅವರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದರು.
ಇದೇ ವೇಳೆ ಯತ್ನಾಳ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಫಿ ತೋಟಗಳು, ಶಾಪಿಂಗ್ ಮಾಲ್‌ಗಳು ಹಾಗೂ ಐಟಿ–ಬಿಟಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನಕಲಿ ಆಧಾರ್ ಹಾಗೂ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಇದು ದೊಡ್ಡ ಜಾಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಭಯಾನಕ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರಿನಲ್ಲಿ ಸುಮಾರು 1.40 ಕೋಟಿ ಜನಸಂಖ್ಯೆ ಇದೆ. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಂದ ಲಕ್ಷಾಂತರ ಜನ ಇಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆಯೂ ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ದೂರುಗಳು ಬಂದಾಗ, ವಿಶೇಷ ತಂಡ ರಚಿಸಿ ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಕಡೆಗಳ ಕಾಫಿ ಎಸ್ಟೇಟ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.
ಅಕ್ರಮ ವಲಸಿಗರು ಎಲ್ಲಿಯೇ ಇದ್ದರೂ ಅವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುವುದು ಎಂದು ಸಚಿವರು ಹೇಳಿದರು. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರು ದೇಶದೊಳಗೆ ನುಸುಳುವುದು ಬಾಂಗ್ಲಾದೇಶ ಗಡಿ ಹೊಂದಿರುವ ರಾಜ್ಯಗಳ ಮೂಲಕವೇ ಆಗುತ್ತದೆ. ಇದು ರಾಜ್ಯ ಸರ್ಕಾರದ ವೈಫಲ್ಯವಲ್ಲ, ಅಕ್ರಮ ಪ್ರವೇಶವನ್ನು ತಡೆಯಲು ವಿಫಲವಾದ ಕೇಂದ್ರ ಸರ್ಕಾರದ ಹೊಣೆಗಾರಿಕೆ ಎಂದು ಅವರು ಅಭಿಪ್ರಾಯಪಟ್ಟರು.
ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಬೇಕು ಹಾಗೂ ಅವರಿಗೆ ತೊಂದರೆ ಆಗಬಾರದು ಎಂಬ ಯತ್ನಾಳ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ಅಕ್ರಮ ವಲಸಿಗರನ್ನಷ್ಟೇ ಅಲ್ಲ, ಅವರನ್ನು ದೇಶದೊಳಗೆ ಕರೆತರುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸುವ ದಲ್ಲಾಳಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ನೀಡುವವರನ್ನು ಸರ್ಕಾರ ರಕ್ಷಿಸುತ್ತದೆ, ಆದರೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಸ್ಪಷ್ಟಪಡಿಸಿದರು.








