ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಗಿಳಿ ಹೊಸೂರ ಗ್ರಾಮದ ರಾಘವೇಂದ್ರ ಗಿರಿಯಾಲ (35) ಅವರು ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಕೊನೆಗೂ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಎಂಟು ಕಾರ್ಮಿಕರು ಮೃತಪಟ್ಟಿದ್ದರೂ ಈವರೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಅಲ್ಲದೆ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರವೂ ನೀಡಿಲ್ಲ ಎಂದು ಆರೋಪಿಸಿ ಬಡ ಕಾರ್ಮಿಕರ ಕುಟುಂಬಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.ಇದನ್ನು ಓದಿ –ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ
ನಿನ್ನೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮೃತದೇಹಗಳನ್ನು ಇರಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಇಂದು ಕೂಡ ಪ್ರತಿಭಟನೆ ಮುಂದುವರಿದಿದ್ದು, ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರೂ ಈವರೆಗೆ ಒಬ್ಬ ಕಾರ್ಮಿಕನ ಕುಟುಂಬಕ್ಕೆ ಮಾತ್ರ ಪರಿಹಾರ ಘೋಷಿಸಲಾಗಿದೆ. ಉಳಿದ ಮೃತರ ಕುಟುಂಬಗಳಿಗೆ ಯಾವುದೇ ಪರಿಹಾರದ ಭರವಸೆಯನ್ನೂ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.








