ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಜನರನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಬೀದರ್, ಕಲಬುರಗಿ, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಇಂದು ಗುಡುಗು–ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಆರೋಗ್ಯ ಇಲಾಖೆ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚಿಸಿದ್ದು, ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ.ಇದನ್ನು ಓದಿ –ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ – ಮೇಲ್ನೋಟಕ್ಕೆ ಕಾರಣಗಳು ಬಹಿರಂಗ
ಇನ್ನೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.








