ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಕುಪ್ಪಂ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ ಸುಮಾರು 7:45ರ ಸಮಯದಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಸ್ಸು ರೈಲ್ವೆ ಲೆವೆಲ್ ಕ್ರಾಸಿಂಗ್ ಅನ್ನು ದಾಟುತ್ತಿದ್ದ ವೇಳೆ ಪ್ಯಾಸೆಂಜರ್ ರೈಲು ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬಸ್ಸು ಕೆಲ ದೂರ ಹೋಗಿದ್ದು, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬಸ್ಸು ಚಾಲಕ ಸೇರಿದಂತೆ ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ರೈಲ್ವೆ ಇಲಾಖೆ ಹಾಗೂ ಸ್ಥಳೀಯ ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ಆರಂಭಿಸಿವೆ. ಈ ದುರಂತದಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಲೆವೆಲ್ ಕ್ರಾಸಿಂಗ್‌ನಲ್ಲಿ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.