ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಚಾಮರಾಜನಗರ ಜಿಲ್ಲೆಯ ಮೊಹನ್ ಕುಮಾರ್ (21) ಹಾಗೂ ಮೈಸೂರಿನ ರವಿಚಂದ್ರ (21) ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು.
ಸ್ನೇಹಿತನೊಂದಿಗೆ ಬಲಮುರಿ ಪ್ರವಾಸಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕರು ನೀರಲ್ಲಿ ಮುಳುಗಿರುವ ಬಗ್ಗೆ ಸ್ನೇಹಿತ ಮಾಹಿತಿ ನೀಡಿದ ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದರು.
ಸ್ಥಳೀಯ ಈಜುಗಾರರ ಸಹಾಯದಿಂದ ಇಬ್ಬರ ಶವಗಳನ್ನು ಹೊರತೆಗೆದು ಮೈಸೂರು ಕೆ.ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








