ಬೆಂಗಳೂರು: ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಿಂದ ಹೊರಬರುತ್ತಿದ್ದ ವೇಳೆ ಸದಾಶಿವನಗರ ಠಾಣೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಬಾಯಿಗೆ ಟೇಪ್ ಅಂಟಿಸಿಕೊಂಡು ಮೌನ ಪ್ರತಿಭಟನೆ ನಡೆಸಲು ವಾಟಾಳ್ ನಾಗರಾಜ್ ಸಜ್ಜಾಗಿದ್ದರು. ಆದರೆ ಪ್ರತಿಭಟನೆಗೆ ತೆರಳುವ ಮುನ್ನವೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರತಿಭಟನೆಗೆ ತೆರಳುವ ಸಾಧ್ಯತೆ ಇರುವವರ ಮೇಲೆ ಪೊಲೀಸರು ನಿಗಾ ವಹಿಸಿದ್ದು, ವಾಟಾಳ್ ನಾಗರಾಜ್ ಅವರನ್ನು ಮನೆಯಿಂದ ಹೊರಬರುತ್ತಿದ್ದಂತೆಯೇ ವಶಕ್ಕೆ ಪಡೆಯಲಾಗಿದೆ.
ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.








