ಬೆಂಗಳೂರು: ರಾಜ್ಯದಲ್ಲಿ ಜೂನ್ 30ರಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ.
ಹೊಸ ಮತದಾರರ ಸೇರ್ಪಡೆ, ಮೃತರಾದವರು, ಮನೆ ಬದಲಾಯಿಸಿದವರು ಹಾಗೂ ಎರಡು ಕಡೆ ಹೆಸರು ಹೊಂದಿರುವವರ ವಿವರಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ.
ಈ ವೇಳೆ ಮತದಾರರ ಗುರುತಿನ ಚೀಟಿಯಲ್ಲಿರುವ ಹೆಸರು, ವಿಳಾಸ, ವಯಸ್ಸು ಸೇರಿದಂತೆ ಇತರೆ ಮಾಹಿತಿಯಲ್ಲಿ ದೋಷಗಳಿದ್ದರೆ ಅವುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಎಸ್‌ಐಆರ್ ಪ್ರಕ್ರಿಯೆ
- ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ.
- ಎರಡು ಎನ್ಯುಮರೇಷನ್ ಫಾರ್ಮ್‌ಗಳನ್ನು ಮತದಾರರಿಗೆ ನೀಡಲಾಗುತ್ತದೆ.
- ಎರಡೂ ಫಾರ್ಮ್‌ಗಳನ್ನು ಭರ್ತಿ ಮಾಡಿ ಮತದಾರರು ಸಹಿ ಮಾಡಬೇಕು.
- ಬಿಎಲ್‌ಒ ಸಹಿ ಮಾಡಿದ ಬಳಿಕ ಒಂದು ಪ್ರತಿಯನ್ನು ಮತದಾರರಿಗೆ ಸ್ವೀಕೃತಿ ಪತ್ರವಾಗಿ ನೀಡಲಾಗುತ್ತದೆ.
- ಮತ್ತೊಂದು ಪ್ರತಿಯನ್ನು ಅಧಿಕಾರಿಗಳು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸುತ್ತಾರೆ.
- ಹೊಸ ಮತದಾರರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ.
- ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುತ್ತದೆ.
- ಕರಡು ಪಟ್ಟಿಯಲ್ಲಿ ಹೆಸರು ತಪ್ಪಿದ್ದರೆ ಅಗತ್ಯ ದಾಖಲೆ ಸಲ್ಲಿಸಿ ಮತ್ತೆ ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶ ಇರುತ್ತದೆ.
ಮನೆ ಬದಲಾಯಿಸಿದವರ ಹೆಸರಿಗೆ ಕತ್ತರಿ ಸಾಧ್ಯತೆ
ಪರಿಷ್ಕರಣೆ ವೇಳೆ ಬಿಎಲ್‌ಒಗಳು ಮನೆಗೆ ಭೇಟಿ ನೀಡಿದಾಗ ನಿವಾಸಿಗಳು ಮನೆಯಲ್ಲಿ ಇಲ್ಲದಿದ್ದರೆ ಅಥವಾ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು ಕಂಡುಬಂದರೆ, ಅಂತಹವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಪರಿಶೀಲನೆ ವೇಳೆ ಅಗತ್ಯ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗೂ ಪರಿಣಾಮ ಸಾಧ್ಯತೆ
ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹರ ಹೆಸರು ಕೈಬಿಡದಂತೆ ಕಾಂಗ್ರೆಸ್ ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟರೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.



