ಚಾಮರಾಜನಗರ: ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಚಿಕ್ಕಸು ನಾಯಕ (65) ಎಂದು ಗುರುತಿಸಲಾಗಿದೆ. ಅವರು ಹೊಂಗನೂರು ಗ್ರಾಮಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಳಿಗ್ಗೆ ಗ್ರಾಮಸ್ಥರು ಎಂದಿನಂತೆ ಗ್ರಾಮಪಂಚಾಯಿತಿ ಕಚೇರಿಗೆ ಬಂದಾಗ, ಕಚೇರಿಯ ಬಾಗಿಲು ಬಳಿ ಚಿಕ್ಕಸು ನಾಯಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದನ್ನು ಗಮನಿಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದು, ಚಿಕ್ಕಸು ನಾಯಕರ ಆತ್ಮಹತ್ಯೆಯ ಹಿಂದೆ ಕೆಲಸದ ಒತ್ತಡವೋ ಅಥವಾ ವೈಯಕ್ತಿಕ ಕಾರಣವೋ ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.ಇದನ್ನು ಓದಿ –ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ಈ ಕುರಿತಾಗಿ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪ್ರಕರಣದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.








