ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.29) ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ನಿರ್ಧಾರಕ್ಕೆ ಏಪ್ರಿಲ್ 24ರಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ಅದರಂತೆ, ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಬೇಕು ಎಂದು ಸೂಚಿಸಲಾಗಿದೆ.
ಪುರುಷ ನೌಕರರು ಖಾದಿ ಪ್ಯಾಂಟ್, ಶರ್ಟ್ ಹಾಗೂ ಓವರ್ ಕೋಟ್ ಧರಿಸಬಹುದಾಗಿದ್ದು, ಮಹಿಳಾ ನೌಕರರು ಖಾದಿ ಸಿಲ್ಕ್ ಸೀರೆ ಅಥವಾ ಛೂಡಿದಾರನ್ನು ಬಳಸಿಕೊಳ್ಳಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಗಳಿಂದಲೇ ಖರೀದಿಸಬೇಕು ಎಂದು ಸೂಚಿಸಲಾಗಿದ್ದು, ಖಾದಿ ಗ್ರಾಮೋದ್ಯೋಗ ಮಂಡಳಿ ಈಗ ನೀಡುತ್ತಿರುವ ರಿಯಾಯಿತಿಗೆ ಹೆಚ್ಚುವರಿಯಾಗಿ ಇನ್ನೂ 5 ಶೇಕಡಾ ರಿಯಾಯಿತಿ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.








