ಬೆಂಗಳೂರು, ಆಗಸ್ಟ್ 5: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವೂ ಮಳೆ ಹಾಗೂ ಬಲವಾದ ಗಾಳಿಯ ಹಿನ್ನೆಲೆಯಲ್ಲಿ ಎಚ್ಚರಿಕೆ ಸಂದೇಶವನ್ನು ಪ್ರಕಟಿಸಿದೆ.
- ಬೆಂಗಳೂರು, ಆಗಸ್ಟ್ 5: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
- ಬೆಂಗಳೂರಿನಲ್ಲೂ ಮಳೆ ಸಾಧ್ಯತೆ
- ಆಗಸ್ಟ್ 6ಕ್ಕೂ ಮಳೆ ಮುಂದುವರಿಕೆ
- ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ.
ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲೂ ಮಳೆ ಸಾಧ್ಯತೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಆಗಸ್ಟ್ 6ಕ್ಕೂ ಮಳೆ ಮುಂದುವರಿಕೆ
ಆಗಸ್ಟ್ 6ರಂದು ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಳೆ ಮತ್ತು ಬಲವಾದ ಗಾಳಿಯ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 16 ಸೆಂ.ಮೀ. ಮಳೆಯಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 15 ಸೆಂ.ಮೀ., ದಕ್ಷಿಣ ಕನ್ನಡದ ಮಂಗಳೂರಿನಲ್ಲಿ 14 ಸೆಂ.ಮೀ. ಹಾಗೂ ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 14 ಸೆಂ.ಮೀ. ಮಳೆಯಾಗಿದೆ.
ಇದಲ್ಲದೆ ಉತ್ತರ ಕನ್ನಡದ ಗೇರುಸೊಪ್ಪದಲ್ಲಿ 13 ಸೆಂ.ಮೀ., ದಕ್ಷಿಣ ಕನ್ನಡದ ಶಕ್ತಿನಗರದಲ್ಲಿ 13 ಸೆಂ.ಮೀ., ಉಡುಪಿ ಜಿಲ್ಲೆಯ ಕೊಲ್ಲೂರು ಹಾಗೂ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 11 ಸೆಂ.ಮೀ., ಬಂಟ್ವಾಳದಲ್ಲಿ 10 ಸೆಂ.ಮೀ. ಮಳೆ ದಾಖಲಾಗಿದೆ.ಇದನ್ನು ಓದಿ –‘ಋತುತಾರೆ’ ಯೋಜನೆಗೆ ರಮ್ಯಾ ರಾಯಭಾರಿ
ಕಾರ್ಕಳ, ಪುತ್ತೂರು, ಮಾಣಿ, ಮುಡಬಿದ್ರೆ, ಜಾಗಲಬೆಟ್ ಹಾಗೂ ರಾಯಚೂರು ಜಿಲ್ಲೆಯ ಮಾನ್ವಿ ಪ್ರದೇಶಗಳಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ.








